This is the title of the web page
This is the title of the web page

Please assign a menu to the primary menu location under menu

State

ಸಮಿತಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು : ಎಂ ಸುಂದರೇಶ ಬಾಬು


ಗಣರಾಜ್ಯೋತ್ಸವ ದಿನಾಚರಣೆ : ಪೂರ್ವಭಾವಿ ಸಭೆ

ಸಮಿತಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು : ಎಂ.ಸುಂದರೇಶ ಬಾಬು 

ಕೊಪ್ಪಳ ಜನವರಿ 07 (ಕರ್ನಾಟಕ ವಾರ್ತೆ): ಜನವರಿ 26 ರಂದು ಜಿಲ್ಲಾ ಕೇಂದ್ರದಲ್ಲಿ ಗಣರಾಜ್ಯೋತ್ಸ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಿಸಲು ನೇಮಕ ಮಾಡಲಾದ ಎಲ್ಲ ಸಮಿತಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ಹೇಳಿದರು.
ಜಿಲ್ಲಾ ಕೇಂದ್ರದಲ್ಲಿ ಗಣರಾಜ್ಯೋತ್ಸ ದಿನಾಚರಣೆಯನ್ನು ಆಚರಿಸುವ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 07 ರಂದು ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಣರಾಜ್ಯೋತ್ಸವ ದಿನಾಚರಣೆಯಂದು ಬೆಳಿಗ್ಗೆ 08 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಹಾಗೂ 09 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಲಿದೆ. ಅಂದು ಜಿಲ್ಲಾ ಕ್ರೀಡಾಂಗಣದಲ್ಲಿನ ಕಾರ್ಯಕ್ರಮದ ಅಚ್ಚುಕಟ್ಟು ನಿರ್ವಹಣೆಗಾಗಿ ವೇದಿಕೆ ಸಮಿತಿ, ಸಾಂಸ್ಕೃತಿಕ ಸಮಿತಿ, ಆಮಂತ್ರಣ ಮುದ್ರಣ ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ನಿಯೋಜಿಸಿ ಸಮಿತಿಗಳನ್ನು ರಚಿಸಲಾಗಿದೆ. ಅದರಂತೆ ಸಮಿತಿಗಳು ಯಾವುದೇ ಗೊಂದಲ, ಅನಾನುಕೂಲಕ್ಕೆ ಅವಕಾಶ ನೀಡದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಸಮಿತಿಗಳಲ್ಲಿನ ಅಧಿಕಾರಿಗಳಿಗೆ ಸೂಚಿಸಿದರು.
ಜ. 26ರ ಕಾರ್ಯಕ್ರಮದಲ್ಲಿ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ಗಣ್ಯರು, ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಲಿದ್ದಾರೆ. ಪ್ರಸ್ತುತ ಕೋವಿಡ್-19ರ ಸಂಭಾವ್ಯ 4ನೇ ಅಲೆಯ ಮುನ್ನೆಚ್ಚರಿಕಾ ಕ್ರಮಗಳ ಜೊತೆಗೆ ಸಮಿತಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಅಚ್ಚುಕಟ್ಟು ನಿರ್ವಹಣೆ ಮಾಡಬೇಕು. ಆರೋಗ್ಯ ಇಲಾಖೆಯಿಂದ ಥರ್ಮಲ್ ಸ್ಕಾನಿಂಗ್, ಮಾಸ್ಕ್, ಸ್ಯಾನಿಟೈಸರ್ ಹಾಗೂ ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಅಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕು. ಅಗ್ನಿಶಾಮಕ ಇಲಾಖೆಯಿಂದ ಅಗ್ನಿಶಾಮಕ ವಾಹನವನ್ನು ಒದಗಿಸಬೇಕು. ಪೊಲೀಸ್ ಇಲಾಖೆ ಶಿಷ್ಠಾಚಾರದಂತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ನಗರಸಭೆಯಿಂದ ನಗರ ಹಾಗೂ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ನಗರದ ಪ್ರಮುಖ ವೃತ್ತಗಳಲ್ಲಿ ಅಲಂಕಾರ ಸೇರಿದಂತೆ ನಿಗದಿಪಡಿಸಿದ ಜವಾಬ್ದಾರಿಯನ್ನು ನಿರ್ವಹಿಸಬೇಕು. ತೋಟಗಾರಿಕೆ ಇಲಾಖೆಯಿಂದ ವೇದಿಕೆ ಅಲಂಕಾರಕ್ಕೆ ಹೂ ಕುಂಡಗಳ ವ್ಯವಸ್ಥೆ ಮಾಡಬೇಕು ಎಂದು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಗಣರಾಜ್ಯೋತ್ಸವ ದಿನಾಚರಣೆಯಂದು ಶಾಲಾ ಮಕ್ಕಳಿಂದ ಒಂದು ಅಥವಾ ಎರಡು ಸಾಂಸ್ಕೃತಿ ಕಾರ್ಯಕ್ರಮ, ಪೊಲೀಸ್, ಅರಣ್ಯ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಮುಂತಾದ ತಂಡಗಳಿಂದ ಕವಾಯತು ನಡೆಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು. ತಾಲ್ಲೂಕು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ, ಎಲ್ಲ ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿಯೂ ಗಣರಾಜ್ಯೋತ್ಸವ ದಿನಾಚರಣೆಗೆ ತಾಲ್ಲೂಕು ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕ್ರಮ ವಹಿಸಬೇಕು. ಶಿಷ್ಠಾಚಾರದಂತೆ ಗಣ್ಯರು, ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ತಹಶೀಲ್ದಾರರು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ,ಉಪ ವಿಭಾಗಾಧಿಕಾರಿಗಳಾದ ಬಸವಣಪ್ಪ ಕಲಶೆಟ್ಟಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Leave a Reply