This is the title of the web page
This is the title of the web page

Please assign a menu to the primary menu location under menu

State

ನದಿತೀರದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭೇಟಿ; ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ


ಬೆಳಗಾವಿ, ಜು. : ನೆರೆಯ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಾದ್ಯಂತ ನಾಲ್ಕೈದು ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ವೇದಗಂಗಾ ಮತ್ತು ದೂಧಗಂಗಾ ನದಿತೀರದ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿ ಪ್ರವಾಹ ನಿರ್ವಹಣೆಯ ಸಿದ್ಧತೆಗಳನ್ನು ಪರಿಶೀಲಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಅವರು ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಜತೆ ಸೋಮವಾರ (ಜು.11) ನದಿತೀರದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿಪ್ಪಾಣಿ ತಾಲ್ಲೂಕಿನ ವೇದಗಂಗಾ ನದಿಪಾತ್ರದ ಕೋಡ್ನಿ ಗ್ರಾಮಕ್ಕೆ ತೆರಳಿದ ಜಿಲ್ಲಾಧಿಕಾರಿಗಳು, ವೇದಗಂಗಾ ಮತ್ತು ಉಪನದಿಯ ನದಿಯ ಹರಿವು ಪ್ರಮಾಣ ಹಾಗೂ ಅಪಾಯದ ಮಟ್ಟದ ಕುರಿತು ಮಾಹಿತಿಯನ್ನು ಪಡೆದುಕೊಂಡರು.
ಕಳೆದ ಬಾರಿಯ ಅನುಭವವನ್ನು ಆಧರಿಸಿ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸಬೇಕು. ಯಾವುದೇ ಕಾರಣಕ್ಕೂ ಜನರು ಮತ್ತು ಜಾನುವಾರುಗಳ ಪ್ರಾಣಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದಾದ ಬಳಿಕ ಯಮಗರ್ಣಿ ಸೇತುವೆಯನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು, ಅತೀ ಹೆಚ್ಚು ಮಳೆಯಿಂದಾಗಿ ಕಳೆದ ಕೆಲವು ವರ್ಷಗಳಲ್ಲಿ ಉದ್ಭವಿಸಿರುವ ಸಮಸ್ಯೆಗಳ ಕುರಿತು ಸ್ಥಳೀಯ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ನಂತರ ಭಿಂವಶಿ ಗ್ರಾಮದಲ್ಲಿ ಸೇತುವೆಯನ್ನು ಪರಿಶೀಲಿಸಿದ ಬಳಿಕ ಸಿದ್ನಾಳ ಮತ್ತು ಅಕ್ಕೋಳ ಗ್ರಾಮಗಳಿಗೆ ಭೇಟಿ ನೀಡಿ ತುರ್ತು ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದ ಸಿದ್ಧತೆಗಳನ್ನು ಪರಿಶೀಲಿಸಿದರು.

ನೋಡಲ್ ಅಧಿಕಾರಿಗಳಿಗೆ ಸೂಚನೆ:

ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಅನುಕೂಲವಾಗುವಂತೆ ಈಗಾಗಲೇ ಪ್ರತಿ ತಾಲ್ಲೂಕಿಗೂ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ನೋಡಲ್ ಅಧಿಕಾರಿಗಳು ಆಯಾ ತಾಲ್ಲೂಕಿನ ಪರಿಸ್ಥಿತಿಯ ಮೇಲೆ ನಿರಂತರವಾಗಿ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರಿಗಳಿಗೆ ಸೂಚ‌ನೆ ನೀಡಿದರು.

ಇದಲ್ಲದೇ ಗ್ರಾಮ ಮಟ್ಟದಲ್ಲಿ ಕೂಡ ಟಾಸ್ಕ್ ಫೋರ್ಸ್ ರಚಿಸಲಾಗಿದ್ದು, ಈ ಸಮಿತಿಯ ಸದಸ್ಯರು ಕೂಡ ಪ್ರವಾಹ ಪರಿಸ್ಥಿತಿ ನಿರ್ವಹಣೆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು.
ಸಮಿತಿಯಲ್ಲಿ ಇರುವ ಗ್ರಾಮ ಪಂಚಾಯತಿ ಅಧ್ಯಕ್ಷರು, ಗ್ರಾಮ ಲೆಕ್ಕ ಅಧಿಕಾರಿಗಳು, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸ್ ಸೇರಿದಂತೆ ವಿವಿಧ ಸದಸ್ಯರು ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇರುವ ಅಪಾಯಕಾರಿ ಸೇತುವೆಗಳ ಮೇಲೆ ಜನರು ಸಂಚರಿಸದಂತೆ ಎಚ್ಚರಿಕೆ ವಹಿಸಬೇಕು. ತುರ್ತು ಸಂದರ್ಭದಲ್ಲಿ ನೋಡಲ್ ಅಧಿಕಾರಿಗಳಿಗೆ ತಕ್ಷಣವೇ ಮಾಹಿತಿಯನ್ನು ನೀಡಬೇಕು ಎಂದು ತಿಳಿಸಿದರು.

24×7 ನಿಗಾ ವಹಿಸಲು ಸೂಚನೆ:

ನೋಡಲ್ ಅಧಿಕಾರಿಗಳು ಮತ್ತು ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರು ಮಳೆಯ ಪ್ರಮಾಣ, ಮದಿಯ ಹರಿವು ಹಾಗೂ ಪ್ರವಾಹ ಪರಿಸ್ಥಿತಿಯ ಮೇಲೆ 24×7 ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪಾಟೀಲ ನಿರ್ದೇಶನ ನೀಡಿದರು.
ಈಗಾಗಲೇ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಮ್ ಗಳು ಕೂಡ ನಿರಂತರವಾಗಿ ಕಾರ್ಯನಿರ್ವಹಿಸುವ ಮೂಲಕ ಕಷ್ಟದಲ್ಲಿರುವ ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು.

ಕಳೆದ ಬಾರಿ ಎಲ್ಲೆಲ್ಲಿ ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿತ್ತು ಎಂಬುದನ್ನು ಪರಿಶೀಲಿಸಿ ಈ ಬಾರಿ ಕೂಡ ಕಾಳಜಿ ಕೇಂದ್ರ ಸ್ಥಾಪನೆಗೆ ಗುರುತಿಸಲಾಗಿದೆ. ಕಾಳಜಿ ಕೇಂದ್ರಗಳ ಸಮರ್ಪಕ ನಿರ್ವಹಣೆಗೆ ಎಲ್ಲರೂ ಸಮನ್ವಯ ದಿಂದ ಕಾರ್ಯನಿರ್ವಹಿಸುವ ಮೂಲಕ ಸಹಕರಿಸಬೇಕೆಂದು ತಿಳಿಸಿದರು.

ಚಿಕ್ಕೋಡಿ ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ ಅವರು, ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ಉಪ ವಿಭಾಗದ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಕಂದಾಯ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Gadi Kannadiga

Leave a Reply