ಬೆಳಗಾವಿ,ಏ.೨೮ : ಸ್ವಾತಂತ್ರ್ಯ ಪೂರ್ವದಲ್ಲಿ ಗಾಂಧೀಜಿಯವರು ಗ್ರಾಮಗಳ ಅಭಿವೃದ್ದಿ ಮೂಲಕ ದೇಶದ ಸಮಗ್ರ ಅಭಿವೃದ್ಧಿ ಆಗಬೇಕು ಎಂಬ ಆಶಯ ಹೊಂದಿದ್ದರು. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಗಾಂಧೀಜಿಯವರ ಕನಸನ್ನು ನನಸು ಮಾಡಬೇಕಿದೆ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ, ೭೫ ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಂಏಂಒ ಅಂತೋದಯ ಕಾರ್ಯಕ್ರಮಕ್ಕೆ ನಗರದ ಕಾಂಗ್ರೆಸ್ ಬಾವಿ (ವೀರ ಸೌಧ) ಆವರಣದಲ್ಲಿ ಗುರುವಾರ (ಏ.೨೮) ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮಗಳ ಬೆಳವಣಿಗೆಯೇ ದೇಶದ ಬೆಳವಣಿಗೆ. ಗ್ರಾಮಗಳು ಬೆಳವಣಿಗೆ ಹೊಂದಬೇಕು, ರೈತರು, ಗುಡಿ ಕೈಗಾರಿಕೆಗಳು ಹಾಗೂ ಗ್ರಾಮೀಣ ವಿಭಾಗದಲ್ಲಿ ಶಿಕ್ಷಣಕ್ಕೆ ಮಹತ್ವವನ್ನು ನೀಡಬೇಕು. ಶಿಕ್ಷಣದಿಂದಲೇ ಹಳ್ಳಿಗಳ ಅಭಿವೃದ್ದಿ ಸಾಧ್ಯ ಆದ್ದರಿಂದ ಎಲ್ಲ ಅಧಿಕಾರಿಗಳು ಗ್ರಾಮಗಳ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
೯೦ ದಿನಗಳ ಕಾಲ ವಿವಿಧ ೧೩ ಇಲಾಖೆಗಳ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಇದಾಗಿದ್ದು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಆಶಯಗಳನ್ನು ಈಡೇರಿಸುವುದು ಎಲ್ಲ ಇಲಾಖೆಗಳ ಸಿಬ್ಬಂದಿ ಹಾಗೂ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಸಚಿವರಾದ ಗೋವಿಂದ ಕಾರಜೋಳ ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಭಯ ಪಾಟೀಲ್ ಅವರು, ೭೫ ವರ್ಷಗಳ ಕಾಲಘಟ್ಟದಲ್ಲಿ ಹಲವಾರು ಮಹನೀಯರು ದೇಶಕ್ಕಾಗಿ ತಮ್ಮ ಬದುಕು ಸಮರ್ಪಣೆ ಮಾಡಿದ್ದಾರೆ, ಅವರ ಬಗ್ಗೆ ಯುವ ಪೀಳಿಗೆಗೆ ತಿಳಿಸುವ ಅಗತ್ಯವಿದೆ ಎಂದು ಹೇಳಿದರು.
ನಂತರ ಂಏಂಒ ಅಂತೋದಯ ಕಾರ್ಯಕ್ರಮ ಅಡಿಯಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಚೆಕ್ ವಿತರಣೆ ಮಾಡಲಾಯಿತು. ಇದಕ್ಕೂ ಮುಂಚೆ ವೀರ ಸೌಧದ ಆವರಣದಲ್ಲಿ ಗಾಂಧೀಜಿಯವರ ಪುತ್ಥಳಿಗೆ ಗಣ್ಯರು ಗೌರವ ಸಲ್ಲಿಸಿದರು.
ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ದರ್ಶನ್ ಎಚ್.ವಿ, ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಮಹಾನಗರ ಪಾಲಿಕೆಯ ಉಪ ಆಯುಕ್ತ(ಆಡಳಿತ)ರಾದ ಭಾಗ್ಯಶ್ರೀ ಹುಗ್ಗಿ ಹಾಗೂ ೧೩ ಇಲಾಖೆಯ ಸಿಬ್ಬಂದಿ ಅಧಿಕಾರಿಗಳು ಉಪಸ್ಥಿತರಿದ್ದರು.
Gadi Kannadiga > Local News > ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಗಾಂಧೀಜಿ ಕಂಡ ಕನಸು ನನಸಾಗಬೇಕು : ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಗಾಂಧೀಜಿ ಕಂಡ ಕನಸು ನನಸಾಗಬೇಕು : ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ
Suresh28/04/2022
posted on
