This is the title of the web page
This is the title of the web page

Please assign a menu to the primary menu location under menu

State

ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-೨೦೨೩ ಮತ ಎಣಿಕೆ ಕೇಂದ್ರದ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿ


ಗದಗ ಮೇ ೧೧: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-೨೦೨೩ ಕ್ಕೆ ಸಂಬಂಧಿಸಿದಂತೆ ಮತಗಳ ಎಣಿಕೆ ಕಾರ್ಯವು ಮೇ ೧೩ ರಂದು ನಗರದ ಮುಂಡರಗಿ ರಸ್ತೆಯಲ್ಲಿನ ಶ್ರೀ ಜಗದ್ಗುರು ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್‌ನಲ್ಲಿ ನಡೆಯಲಿದೆ. ಮತ ಎಣಿಕೆ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮತ ಎಣಿಕೆ ಕೇಂದ್ರದ ಸುತ್ತಲೂ ೨೦೦ ಮೀಟರ್ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿಪಾಲನೆ ಹಿತದೃಷ್ಟಿಯಿಂದ ಮೇ ೧೩ ರ ಬೆ ೫ ಗಂಟೆಯಿಂದ ಮಧ್ಯರಾತ್ರಿ ೧೨ ಗಂಟೆಯವರೆಗೆ ಕೆಳಕಂಡ ಷರತ್ತುಗಳನ್ನು ವಿಧಿಸಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ , ಗದೆ, ಬಂದೂಕು, ಚೂರಿ, ಲಾಟಿ , ಡೊಣ್ಣೆ , ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟುಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಕಲ್ಲುಗಳನ್ನು, ಕ್ಷಾರಪದಾರ್ಥ ಇಲ್ಲವೇ ಸ್ಪೋಟಕ ವಸ್ತುಗಳನ್ನು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂಥಹ ವಸ್ತುಗಳನ್ನು ಎಸೆಯುವ ಅಥವಾ . ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು. ಪದ ಹಾಡುವುದು, ವಾದ್ಯ ಬಾರಿಸುವುದು. ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ, ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ. ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು. ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ ೧೮೮ರ ಪ್ರಕಾರ ಹಾಗೂ ಅನ್ವಯಿಸುವ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮವನ್ನು ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಆದೇಶಿಸಿದ್ದಾರೆ.


Leave a Reply