ಬೆಳಗಾವಿ: ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ನ್ಯಾಯ ಒದಗಿಸಲಾಗುವುದು. ನ್ಯಾಯಾಲಯಗಳಲ್ಲಿ ಬಾಕಿ ಇರುವ ಪರಿಶಿಷ್ಟ ಸಮುದಾಯಗಳ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥ ಮಾಡಲಾಗುವುದು ಹಾಗೂ ಅವರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಮಾ.29) ಪರಿಶಿಷ್ಟ ಜಾತಿ/ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳ ಅನ್ವಯ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಸಮುದಾಯದ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯ ತಡೆಗೆ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ನ್ಯಾಯ ಒದಗಿಸಲು ಕಾನೂನು ಸಲಹೆ ನೀಡಬೇಕು. ಮಾನಸಿಕವಾಗಿ ಆತ್ಮಸ್ಥೈರ್ಯ ತುಂಬಬೇಕು ಎಂದು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನರಿಗೆ ಸ್ಮಶಾನ ಭೂಮಿ ಇಲ್ಲದಿರುವ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಮಂಜೂರು ಮಾಡಲು ಸೂಕ್ತ ಸ್ಥಳ ಗುರುತಿಸಿ ಪ್ರಸ್ತಾವನೆ ಸಲ್ಲಿಸಲು ತಹಶೀಲ್ದಾರಗಳಿಗೆ ಸೂಚನೆ ನೀಡಿದರು.
ಚಿಕ್ಕೋಡಿ, ಅಥಣಿ, ರಾಯಬಾಗ, ನಿಪ್ಪಾಣಿ ಹಾಗೂ ಕಾಗವಾಡ ತಾಲೂಕುಗಳಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು ವಾಸವಿರುವ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಮಂಜೂರಾತಿಗಾಗಿ ಅನುಮತಿ ನೀಡಲಾಗುವುದು ಎಂದು ತಿಳಿಸಿದರು.