This is the title of the web page
This is the title of the web page

Please assign a menu to the primary menu location under menu

State

ಸೆಪ್ಟೆಂಬರ್ ೦೯ರಂದು ರಾಷ್ಟ್ರೀಯ ಲೋಕ್ ಅದಾಲತ್: ನ್ಯಾ. ಬನ್ನಿಕಟ್ಟಿ ಹನುಮಂತಪ್ಪ


ಕೊಪ್ಪಳ ಆಗಸ್ಟ್ ೨೩ : ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯುವಂತೆ ಸೆಪ್ಟೆಂಬರ್ ೦೯ರಂದು ಕೊಪ್ಪಳ ಜಿಲ್ಲೆಯಲ್ಲಿ ಸಹ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜನೆ ಮಾಡಲಾಗಿದೆ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬನ್ನಿಕಟ್ಟಿ ಹನುಮಂತಪ್ಪ ಅವರು ಹೇಳಿದರು.
ಜಿಲ್ಲಾ ನ್ಯಾಯಾಲಯದ ತಮ್ಮ ಕಚೇರಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದರು.
ವ್ಯಾಜ್ಯ ಪೂರ್ವ ಪ್ರಕರಣಗಳಾದ ಚಿಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರ ಸಿವಿಲ್ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು (ಆರ್.ಇ.ಆರ್.ಎ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ, ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ಈ ಲೋಕ ಅದಾಲತ್‌ನಲ್ಲಿ ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.
ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು ಎಂದು ಅವರು ಹೇಳಿದರು.
ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಲೋಕ್ ಅಧಾಲತ್ ಒಂದು ವಿಶೇಷ ಅವಕಾಶವಾಗಿದೆ. ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ್ ಆದಾಲತ್‌ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‌ಗಳು ಭೌತಿಕ ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುತ್ತಲಿವೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಪ್ಪಳ ಟೋಲ್ ಫ್ರಿ ಸಂಖ್ಯೆ: ೦೮೫೩೯-೨೨೦೨೩೩ಗೆ ಸಂಪರ್ಕಿಸಬಹುದು ಎಂದು ಇದೇ ವೇಳೆ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವೇಂದ್ರ ಪಂಡಿತ್ ಅವರು ಹೇಳಿದರು.


Leave a Reply