ಕೊಪ್ಪಳ ಮಾರ್ಚ್ ೨೩ : ೨೦೨೩ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳಲ್ಲಿ ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಪರೀಕ್ಷೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಸೂಚನೆ ನೀಡಿದರು.
೨೦೨೩ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾರ್ಚ್ ೨೩ ರಂದು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾರ್ಚ್ ೩೧ ರಿಂದ ಏಪ್ರೀಲ್ ೧೫ ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳನ್ನು ಯಾವುದೇ ಅಕ್ರಮ ಚಟುವಟಿಕೆಗೆ ಅವಕಾಶ ಕೊಡದೇ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ಪ್ರಶ್ನೆಪತ್ರಿಕೆ ಖಜಾನೆ ಇಲಾಖೆಗೆ ಠೇವಣಿಯಲ್ಲಿರಿಸಿ. ಪರೀಕ್ಷಾ ದಿನದಂದು ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ತೆಗೆದುಕೊಂಡು ನಿಗದಿತ ಅವಧಿಯೊಳಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಹೊಣೆ ಆಯಾ ಮಾರ್ಗಾಧಿಕಾರಿಗಳಿಗೆ ವಹಿಸಲಾಗಿದ್ದು, ವಿಳಂಬಕ್ಕೆ ಅವಕಾಶವಿಲ್ಲದಂತೆ ಪ್ರಶ್ನೆಪತ್ರಿಕೆಯನ್ನು ನಿಗದಿತ ಅವಧಿಯೊಳಗೆ ತಲುಪಿಸಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಬಗೆಯ ಮೊಬೈಲ್ ಫೋನ್, ಕ್ಯಾಲ್ಕುಲೇಟರ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆಯನ್ನು ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಗತ್ಯ ಬಸ್ ವ್ಯವಸ್ಥೆಯನ್ನು ಕಲ್ಪಿಸಬೇಕು. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು, ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಶಿಕ್ಷಕರು, ಅಧಿಕಾರಿ, ಸಿಬ್ಬಂದಿಗಳನ್ನು ಹೊರತುಪಡಿಸಿ, ಇನ್ನುಳಿದವರ ಪ್ರವೇಶಕ್ಕೆ ಅವಕಾಶ ನೀಡಬಾರದು. ಪರೀಕ್ಷಾ ಕೇಂದ್ರದ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆ ಇದ್ದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಸಂಬಂದಿಸಿದ ನಗರಸಭೆ ಅಥವಾ ಗ್ರಾಮ ಪಂಚಾಯತ್ ಅಧಿಕಾರಿಗಳನ್ನು ಮುಂಚಿತವಾಗಿ ಸಂಪರ್ಕಿಸಿ ಕ್ರಮ ಕೈಗೊಳ್ಳಬೇಕು. ಇದಲ್ಲದೇ ಶೌಚಾಲಯಗಳ ವ್ಯವಸ್ಥೆಯನ್ನು ಸಹ ಕಲ್ಪಿಸಬೇಕು. ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರದ ಸೂಚನೆಗಳನ್ನು ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಪರೀಕ್ಷೆ ಬರೆಯುವ ಮಕ್ಕಳ ಆರೋಗ್ಯದ ಹಿತದೃಷ್ಠಿಯಿಂದ ಪ್ರಥಮ ಚಿಕಿತ್ಸೆಗಾಗಿ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಕಿಟ್ ಮತ್ತು ಆರೋಗ್ಯ ಸಹಾಯಕರನ್ನು ನಿಯೋಜಿಸಿ. ಪರೀಕ್ಷೆ ಬರೆಯುವ ವಿಕಲಚೇತನ ವಿದ್ಯಾರ್ಥಿಗಳಿಗೆ ನೆಲ ಮಹಡಿಯಲ್ಲಿ ಸೂಕ್ತ ಆಸನದ ವ್ಯವಸ್ಥೆ ಮಾಡಬೇಕು. ಅಂಧ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮತ್ತು ಬರವಣಿಗೆ ಸಹಾಯಕರ ಒಪ್ಪಿಗೆ ಪತ್ರವನ್ನು ಪರಿಶೀಲಿಸಬೇಕು. ಸಗಮವಾಗಿ ಪರೀಕ್ಷೆ ನಡೆಯುವಂತೆ ಸೂಕ್ತ ಕ್ರಮ ವಹಿಸುವುದು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಎಂ.ಎ ರೆಡ್ಡೇರ್ ಅವರು ಮಾತನಾಡಿ, ನಡೆಯಲಿರುವ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯ ಒಟ್ಟು ೨೫,೧೦೪ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಇದರಲ್ಲಿ ೧೨,೮೦೨ ಗಂಡು ಮತ್ತು ೧೨,೩೦೨ ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ ಮೂರು ಸೂಕ್ಷ್ಮ ಪರೀಕ್ಷಾ ಕೇಂದ್ರಗಳು (ಖಾಸಗಿ) ಒಳಗೊಂಡಂತೆ ಒಟ್ಟು ೭೯ ಪರೀಕ್ಷಾ ಕೇಂದ್ರಗಳಿದ್ದು, ಗಂಗಾವತಿ ತಾಲ್ಲೂಕಿನಲ್ಲಿ ೨೪, ಕೊಪ್ಪಳದಲ್ಲಿ ೨೬, ಕುಷ್ಟಗಿಯಲ್ಲಿ ೧೫ ಹಾಗೂ ಯಲಬುರ್ಗಾ ತಾಲ್ಲೂಕಿನಲ್ಲಿ ೧೪ ಪರೀಕ್ಷಾ ಕೇಂದ್ರಗಳನ್ನು ಸಿದ್ಧಗೊಳಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಮುಖ್ಯ ಅಧೀಕ್ಷಕರು ಹಾಗೂ ಪ್ರಶ್ನೆಪತ್ರಿಕೆ ಅಧೀಕ್ಷಕರನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಕೊಪ್ಪಳ ಡಿವೈಎಸ್ಪಿ ಶರಣಪ್ಪ ಸುಬೇದಾರ ಸೇರಿದಂತೆ ವಿವಿಧ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಷಯ ನಿರ್ವಾಹಕರು, ೭೯ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ತಾಲ್ಲೂಕು ನೋಡಲ್ ಅಧಿಕಾರಿಗಳು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
Gadi Kannadiga > State > ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ: ಪೂರ್ವಭಾವಿ ಸಭೆ ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ : ಎಂ.ಸುಂದರೇಶ ಬಾಬು
ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ: ಪೂರ್ವಭಾವಿ ಸಭೆ ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ : ಎಂ.ಸುಂದರೇಶ ಬಾಬು
Suresh23/03/2023
posted on

More important news
ಪ್ರತಿಬಂಧಕಾಜ್ಞೆ ಜಾರಿ
08/06/2023