ಗದಗ ಅಕ್ಟೋಬರ್ ೨೧ : ಜಿಲ್ಲೆಯ ವಿವಿಧೆಡೆ ಇರುವ ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಸರ್ಕಾರದ ವಿವಿಧ ಸೌಲಭ್ಯಗಳು ಸಮರ್ಪಕ ಪ್ರಮಾಣದಲ್ಲಿ ದೊರಕುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎನ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಜರುಗಿದ ಅಲೆಮಾರಿ, ಅರೆಅಲೆಮಾರಿ ಜನಾಂಗದವರ ಸಲಹಾ ಸಮಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಸಮೀಕ್ಷೆಯನ್ನು ಇಲಾಖೆಯಿಂದ ಕೈಗೊಳ್ಳಲಾಗಿದ್ದು, ಪ್ರಸಕ್ತ ತಾಲೂಕಾವಾರು ವಾಸಿಸುವ ಜನಾಂಗದ ಅಂಕಿ ಅಂಶಗಳನ್ನು ಪರಾಮರ್ಶಿಸಬೇಕು. ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ವಿವಿಧ ಇಲಾಖೆಗಳು ಕೈಜೋಡಿಸಬೇಕು .ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಖರೀದಿಗೆ ಕ್ರಮ ಕೈಗೊಳ್ಳಬೇಕು. ಅಲೆಮಾರಿ / ಅರೆ ಅಲೆಮಾರಿ ಜನಾಂಗದ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮೆಹಬೂಬ ತುಂಬರಮಟ್ಟಿ ಮಾತನಾಡಿ ಇಲಾಖೆಯಿಂದ ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗಾಗಿ ಮಾಧ್ಯಮಿಕ/ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಹತಾ ವಿದ್ಯಾರ್ಥಿ ವೇತನ, ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಜಮೀನು ಖರೀದಿ, ವಸತಿ ಸೌಲಭ್ಯ ಹಾಗೂ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ೨೦೨೧-೨೨ ನೇ ಸಾಲಿನ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ೧೪೭ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ೨,೯೪,೦೦೦/- ರೂ.ಗಳನ್ನು ಮಂಜೂರು ಮಾಡಲಾಗಿದೆ. ೨೦೨೧-೨೨ ನೇ ಸಾಲಿನಲ್ಲಿ ೪೪೪ ವಿದ್ಯಾರ್ಥಿಗಳಿಗೆ ೮,೮೮,೦೦೦/ರೂ. ಮೆಟ್ರಿಕ್ ಪೂರ್ವ ನವೀಕರಣ ವಿದ್ಯಾರ್ಥಿ ವೇತನ ಮಂಜೂರು ಮಾಡಲಾಗಿದೆ. ಅಲೆಮಾರಿ/ ಅರೆ ಅಲೆಮಾರಿ ಜನಾಂಗಗಳ ಸರ್ವೆ ಮಾಡಿ ಜಿಲ್ಲೆಯಲ್ಲಿ ಒಟ್ಟು ೧೬೮೭ ಅಲೆಮಾರಿ/ ಅರೆ ಅಲೆಮಾರಿ ಕುಟುಂಬಗಳಿದ್ದು , ಅದರಲ್ಲಿ ೭೫೭ ಸ್ವಂತ ಮನೆ ಹೊಂದಿದ , ೯೩೦ ಬಾಡಿಗೆ ಮನೆ ಹೊಂದಿರುವ ಕುಟುಂಬ, ೫೭ ನಿವೇಶನ ಹೊಂದಿದ ಹಾಗೂ ೮೭೩ ನಿವೇಶನ ಇಲ್ಲದ ಕುಟುಂಬಗಳೆಂದು ಗುರುತಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟಪ್ಪನವರ, ತಾಲೂಕಾ ಮಟ್ಟದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಸಲಹಾ ಸಮಿತಿ ಸದಸ್ಯರು ಇದ್ದರು.
Gadi Kannadiga > State > ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಸರ್ಕಾರದ ವಿವಿಧ ಸೌಲಭ್ಯಗಳು ದೊರಕಲಿ